ಕಾಗವಾಡ, ಮೇ 30:
ಮುಂಬರುವ ಮಳೆಗಾಲದಲ್ಲಿ ಸಂಭವಿಸಬಹುದಾದ ನೆರೆ ಹಾವಳಿ ಹಾಗೂ ತುರ್ತು ಪರಿಸ್ಥಿತಿಗಳನ್ನು ಸಮರ್ಥವಾಗಿ ಎದುರಿಸಲು ಕಾಗವಾಡ ತಹಶೀಲ್ದಾರ ರವೀಂದ್ರ ಹಾದಿಮನಿ ಅವರ ನೇತೃತ್ವದಲ್ಲಿ ತಾಲೂಕು ಮಟ್ಟದ ಪೂರ್ವಭಾವಿ ಸಭೆ ಶುಕ್ರವಾರ ಕಾಗವಾಡದ ಸರ್ಕಾರಿ ವಿಶ್ರಾಂತಿ ಗೃಹದಲ್ಲಿ ನಡೆಯಿತು.
ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣ ವಾಲಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ ಮಳೆಗಾಲದ ಸಿದ್ಧತೆ ಕುರಿತು ಚರ್ಚಿಸಿದರು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ತಹಶೀಲ್ದಾರ ರವೀಂದ್ರ ಹಾದಿಮನಿ, ಕಾಗವಾಡ ತಾಲೂಕಿನಲ್ಲಿ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಯಾವುದೇ ಸಮಸ್ಯೆ ಉಂಟಾಗಿಲ್ಲ ಎಂದು ತಿಳಿಸಿದರು. ಪ್ರಸ್ತುತ ಇನ್ನೂ ಎಂಟು ವಾರಗಳಿಗೆ ಸಾಕಾಗುವಷ್ಟು ನೀರು ಮತ್ತು ಮೇವಿನ ವ್ಯವಸ್ಥೆ ಲಭ್ಯವಿದ್ದು ಯಾವುದೇ ಕೊರತೆ ಇಲ್ಲ ಎಂದರು.
ಮಳೆಗಾಲದಲ್ಲಿ ಕೃಷ್ಣಾ ನದಿಗೆ ಮಹಾಪೂರ ಬರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಗತ್ಯ ಸಿದ್ಧತೆ ಕೈಗೊಳ್ಳಲಾಗುತ್ತಿದೆ. ನದಿ ತೀರದ ಎಂಟು ಗ್ರಾಮಗಳು ಸಂಪೂರ್ಣವಾಗಿ ಹಾಗೂ ಐದು ಗ್ರಾಮಗಳು ಭಾಗಶಃ ನೆರೆ ಬಾಧೆಗೆ ಒಳಗಾಗುವ ಸಾಧ್ಯತೆ ಇರುವುದರಿಂದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಿದರು.
ತಾಲೂಕಿನಲ್ಲಿ ಈಗಾಗಲೇ ಎಂಟು ದೋಣಿಗಳಿದ್ದು, ಅವುಗಳಲ್ಲಿ ಮೂರು ದೋಣಿಗಳಿಗೆ ತಾಂತ್ರಿಕ ದೋಷಗಳಿರುವುದರಿಂದ ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಅರಣ್ಯ ಇಲಾಖೆ ಹಾಗೂ ಹೆಸ್ಕಾಂ ಅಧಿಕಾರಿಗಳು ಗಾಳಿ-ಮಳೆಯಿಂದ ಅಪಾಯ ಉಂಟುಮಾಡಬಹುದಾದ ಮರಗಳನ್ನು ಗುರುತಿಸಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಶಿಥಿಲಾವಸ್ಥೆಯಲ್ಲಿರುವ ಮನೆಗಳನ್ನು ಗುರುತಿಸಿ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಜವಾಬ್ದಾರಿ ಸಂಬಂಧಪಟ್ಟ ಅಧಿಕಾರಿಗಳ ಮೇಲಿದೆ ಎಂದು ತಿಳಿಸಿದರು.
ಆರೋಗ್ಯ ಇಲಾಖೆ ಅಧಿಕಾರಿಗಳು ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು. ಪಶು ವೈದ್ಯಾಧಿಕಾರಿಗಳು ಜಾನುವಾರುಗಳ ಆರೋಗ್ಯ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.
ರಾಜ್ಯ ಸರ್ಕಾರದ ನಿರ್ದೇಶನದಂತೆ ಜೂನ್ ತಿಂಗಳ ಅವಧಿಯಲ್ಲಿ ಯಾವುದೇ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ರಜೆ ಮಂಜೂರು ಮಾಡುವುದಿಲ್ಲ. ಎಲ್ಲರೂ ತಮ್ಮ ಕೇಂದ್ರ ಸ್ಥಾನದಲ್ಲೇ ಉಳಿದು ಕರ್ತವ್ಯ ನಿರ್ವಹಿಸಬೇಕು ಎಂದು ತಹಶೀಲ್ದಾರರು ಸ್ಪಷ್ಟಪಡಿಸಿದರು.
ಸಭೆಯಲ್ಲಿ ಮಾತನಾಡಿದ ಕಾಗವಾಡ ಪಿಎಸ್‌ಐ ರಾಘವೇಂದ್ರ ಖೋತ್, ಗ್ರಾಮ ಪಂಚಾಯಿತಿ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ಪಟ್ಟಣ ಪಂಚಾಯಿತಿ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಕಳ್ಳತನ ಹಾಗೂ ಅಕ್ರಮ ಚಟುವಟಿಕೆಗಳ ಬಗ್ಗೆ ನಿಗಾ ವಹಿಸಬೇಕು ಎಂದು ಸೂಚಿಸಿದರು. ಪ್ರತಿಯೊಂದು ಗ್ರಾಮದಲ್ಲೂ ಸಿಸಿಟಿವಿ ಕ್ಯಾಮೆರಾ ಅಳವಡಿಕೆಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.
ಮಳೆಗಾಲದಲ್ಲಿ ರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚುವ ಜವಾಬ್ದಾರಿ ಲೋಕೋಪಯೋಗಿ ಇಲಾಖೆ ಹಾಗೂ ತಾಲೂಕು ಪಂಚಾಯಿತಿ ಅಧಿಕಾರಿಗಳ ಮೇಲಿದೆ. ನೀರು ನಿಂತು ವಾಹನ ಸವಾರರಿಗೆ ತೊಂದರೆ ಆಗದಂತೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಸೂಚಿಸಲಾಯಿತು.
ಸಭೆಯಲ್ಲಿ ಗ್ರೇಡ್-2 ತಹಶೀಲ್ದಾರ್ ರಶ್ಮಿ ಜಕಾತೆ, ಉಪ ತಹಶೀಲ್ದಾರ್ ವಿಜಯಕುಮಾರ ಚೌಗುಲ್ಲೆ, ತಾಲೂಕು ವೈದ್ಯಾಧಿಕಾರಿ ಡಾ. ಪುಷ್ಪಲತಾ ಸುಣ್ಣದಕಲ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪ್ರಸನ್ನ ಕಲ್ಯಾಣಶೆಟ್ಟಿ, ಕೆ.ಕೆ. ಗಾವಡೆ, ಮಹಾಂತೇಶ್ ಕೊಲ್ಲಾಪುರ, ಕ್ಷೇತ್ರ ಶಿಕ್ಷಣಾಧಿಕಾರಿ ಪಾಂಡುರಂಗ ಮದಭಾವಿ, ಕೃಷಿ ಅಧಿಕಾರಿ ನಿಂಗಣ್ಣಾ ಬಿರಾದಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
Post a Comment