ಹುಬ್ಬಳ್ಳಿ: ನಗರದ ಪ್ರಮುಖ ಪ್ರದೇಶವಾದ ಗೋಕುಲ್ ರೋಡ್‌ನಲ್ಲಿ ಅಕ್ರಮವಾಗಿ ಶೆಡ್ ನಿರ್ಮಾಣ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ ಘಾಳಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಸ್ಥಳ ಪರಿಶೀಲನೆ ನಡೆಸಿದ ಆಯುಕ್ತರು, ಶೆಡ್ ನಿರ್ಮಾಣಕ್ಕೆ ಸಂಬಂಧಿಸಿದ ದಾಖಲೆಗಳು, ಅನುಮತಿ ಹಾಗೂ ನಿಯಮ ಪಾಲನೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ನಗರದಲ್ಲಿ ಅನಧಿಕೃತ ಕಟ್ಟಡಗಳು ಹಾಗೂ ಒತ್ತುವರಿ ವಿರುದ್ಧ ಪಾಲಿಕೆ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಗೋಕುಲ್ ರೋಡ್‌ನಂತಹ ಪ್ರಮುಖ ಪ್ರದೇಶಗಳಲ್ಲಿ ನಿಯಮ ಉಲ್ಲಂಘಿಸಿ ನಿರ್ಮಾಣಗಳು ನಡೆಯುತ್ತಿದ್ದರೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ನಾಗರಿಕರು ಆಗ್ರಹಿಸಿದ್ದಾರೆ.
ಪರಿಶೀಲನೆಯ ನಂತರ ಸಂಬಂಧಪಟ್ಟ ಅಧಿಕಾರಿಗಳಿಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ ಎನ್ನಲಾಗಿದ್ದು, ನಿಯಮ ಉಲ್ಲಂಘನೆ ದೃಢಪಟ್ಟಲ್ಲಿ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.
ಆಯುಕ್ತರ ಭೇಟಿ ಬಳಿಕ ಅಕ್ರಮ ಶೆಡ್ ತೆರವುಗೊಳ್ಳುತ್ತದೆಯೇ? ಅಥವಾ ಕ್ರಮ ವಿಳಂಬವಾಗುತ್ತದೆಯೇ ಎಂಬುದರತ್ತ ಈಗ ಎಲ್ಲರ ಗಮನ ನೆಟ್ಟಿದೆ. :::
Post a Comment