ಹುಬ್ಬಳ್ಳಿ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ‘ಪಂಚ ಗ್ಯಾರಂಟಿ’ ಯೋಜನೆಗಳ ಸೌಲಭ್ಯಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ಪರಿಣಾಮಕಾರಿಯಾಗಿ ತಲುಪುವಂತೆ ಮಾಡಲು ಅಧಿಕಾರಿಗಳು ಹಾಗೂ ಸಮಿತಿಯ ಸದಸ್ಯರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ಬೆಳಗಾವಿ ಕಂದಾಯ ವಿಭಾಗದ ಉಸ್ತುವಾರಿಗಳಾದ ಎಸ್. ಆರ್. ಪಾಟೀಲ (ಬ್ಯಾಡಗಿ) ಹೇಳಿದರು.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರ ಸಭಾಂಗಣದಲ್ಲಿ, ಮಹಾನಗರ ಪಾಲಿಕೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಕುರಿತು ಸಭೆಯಲ್ಲಿ ಪರಿಶೀಲನೆ ನಡೆಸಲಾಯಿತು. ಯೋಜನೆಗಳ ಲಾಭ ಪಡೆಯುವಲ್ಲಿ ಸಾರ್ವಜನಿಕರಿಗೆ ಎದುರಾಗುವ ಸಮಸ್ಯೆಗಳನ್ನು ಶೀಘ್ರ ಪರಿಹರಿಸಿ, ಅರ್ಹರಿಗೆ ಸೌಲಭ್ಯ ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.
ಸಭೆಯ ಆರಂಭದಲ್ಲಿ ಪಾಲಿಕೆ ಮಟ್ಟದ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಉಪ ಆಯುಕ್ತರಾದ (ಆಡಳಿತ) ಶ್ರೀಮತಿ ಅನುರಾಧ ವಸ್ತ್ರದ (KAS) ಅವರು ಗಣ್ಯರನ್ನು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಪಾಲಿಕೆ ಮಟ್ಟದ ಗ್ಯಾರಂಟಿ ಯೋಜನಾ ಸಮಿತಿಯ ಅಧ್ಯಕ್ಷರಾದ ಪ್ರಕಾಶ ಹಳಿಯಾಳ, ಉಪಾಧ್ಯಕ್ಷರಾದ ವಿರೇಶ್ ಕಡಕೋಳಮಠ ಸೇರಿದಂತೆ ವಿಧಾನಸಭಾ ಕ್ಷೇತ್ರಗಳಾದ 71, 72, 73 ಹಾಗೂ 74ರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ಪಂಚ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಲಹೆ-ಸೂಚನೆಗಳನ್ನು ಪಡೆದು ಮುಂದಿನ ದಿನಗಳಲ್ಲಿ ಇನ್ನಷ್ಟು ಜನಪರವಾಗಿ ಕಾರ್ಯನಿರ್ವಹಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
Post a Comment