ಧಾರವಾಡ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಧಾರವಾಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ–2026 ಕಾರ್ಯ ಜೂನ್ 30 ರಿಂದ ಅಕ್ಟೋಬರ್ 7 ರವರೆಗೆ ನಡೆಯಲಿದ್ದು, ಈ ಕಾರ್ಯ ಯಶಸ್ವಿಯಾಗಿ ನಡೆಯಲು ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಮನವಿ ಮಾಡಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ 30 ರಿಂದ ಜುಲೈ 29 ರವರೆಗೆ ಬಿಎಲ್‌ಓಗಳು ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಆಗಸ್ಟ್ 5 ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದ್ದು, ಸೆಪ್ಟೆಂಬರ್ 4 ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿರುತ್ತದೆ. ಅಂತಿಮ ಮತದಾರರ ಪಟ್ಟಿ ಅಕ್ಟೋಬರ್ 7 ರಂದು ಪ್ರಕಟವಾಗಲಿದೆ ಎಂದು ತಿಳಿಸಿದರು.
ಧಾರವಾಡ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 1,665 ಮತಗಟ್ಟೆಗಳಿದ್ದು, 16,22,294 ಮತದಾರರಿದ್ದಾರೆ. ಇವರಲ್ಲಿ 8,05,624 ಪುರುಷರು, 8,16,572 ಮಹಿಳೆಯರು ಹಾಗೂ 98 ತೃತೀಯ ಲಿಂಗದ ಮತದಾರರು ಸೇರಿದ್ದಾರೆ. ಪರಿಷ್ಕರಣೆ ಕಾರ್ಯಕ್ಕಾಗಿ 1,665 ಬಿಎಲ್‌ಓಗಳು ಹಾಗೂ 230 ಬಿಎಲ್‌ಓ ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ.
ರಾಜಕೀಯ ಪಕ್ಷಗಳು ಬೂತ್ ಮಟ್ಟದ ಏಜೆಂಟ್‌ಗಳ (ಬಿಎಲ್‌ಎ) ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ಚುನಾವಣಾ ಪ್ರಕ್ರಿಯೆಗೆ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಮತದಾರರ ಅನುಕೂಲಕ್ಕಾಗಿ ಜಿಲ್ಲೆಯಲ್ಲಿ 509 ಬಿಎಲ್‌ಓ ಸೌಲಭ್ಯ ಕೇಂದ್ರಗಳನ್ನು ಗುರುತಿಸಲಾಗಿದ್ದು, ಗ್ರಾಮ ಆಡಳಿತಾಧಿಕಾರಿ ಕಚೇರಿ, ಪಂಚಾಯತ್ ಕಚೇರಿ, ವಾರ್ಡ್ ಕಚೇರಿ, ಗ್ರಾಮ ಒನ್ ಹಾಗೂ ನಾಡ ಕಚೇರಿಗಳ ಮೂಲಕ ಸೇವೆ ಒದಗಿಸಲಾಗುವುದು.
ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಮಾಧ್ಯಮಗಳಲ್ಲಿ ಬರುವ ಮಾಹಿತಿ, ಸಮಸ್ಯೆಗಳು ಹಾಗೂ ತಪ್ಪು ಮಾಹಿತಿಗಳ ಪರಿಶೀಲನೆಗಾಗಿ ಮಾಧ್ಯಮ ಮೇಲ್ವಿಚಾರಣಾ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಉಪಸ್ಥಿತರಿದ್ದರು.
— ನ್ಯೂ ವಿಜಯ ನ್ಯೂಸ್ ವರದಿ
Post a Comment