ಅಥಣಿ, ಜೂ.29: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕಟಗೇರಿ ಗ್ರಾಮದಲ್ಲಿ ಪತ್ನಿಯ ಮೇಲಿನ ಸಂಶಯದ ಹಿನ್ನೆಲೆ ಪತಿಯೊಬ್ಬ ಮಲಗಿದ್ದ ಪತ್ನಿಯನ್ನು ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ.
ಮೃತ ಮಹಿಳೆಯನ್ನು ಶೋಭಾ ಪರಗೂಂಡ ಸಾರವಾಡ (35) ಎಂದು ಗುರುತಿಸಲಾಗಿದೆ. ಆರೋಪಿ ಪತಿ ಪರಗೂಂಡ ಸಾರವಾಡನನ್ನು ಅಥಣಿ ಪೊಲೀಸರು ಬಂಧಿಸಿದ್ದಾರೆ.
ಮೂಲತಃ ಖವಟಗೋಪ್ಪ ಗ್ರಾಮದವರಾದ ದಂಪತಿ ಪ್ರಸ್ತುತ ಕಟಗೇರಿ ಗ್ರಾಮದಲ್ಲಿ ವಾಸವಾಗಿದ್ದರು. ಸುಮಾರು 15 ವರ್ಷಗಳ ಹಿಂದೆ ವಿವಾಹವಾಗಿದ್ದ ಇವರ ನಡುವೆ ಪತ್ನಿಯ ಮೇಲಿನ ಸಂಶಯ ಹಾಗೂ ಪತಿಯ ಮದ್ಯಪಾನದ ಚಟದಿಂದಾಗಿ ಆಗಾಗ ಜಗಳ ನಡೆಯುತ್ತಿತ್ತು ಎಂದು ತಿಳಿದುಬಂದಿದೆ.
ಘಟನೆಯ ದಿನ ರಾತ್ರಿ ಶೋಭಾ ಗಾಢ ನಿದ್ರೆಯಲ್ಲಿದ್ದ ವೇಳೆ ಪರಗೂಂಡ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾನೆ. ತೀವ್ರವಾಗಿ ಗಾಯಗೊಂಡ ಶೋಭಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಶೋಭಾ ಕಟಗೇರಿಯ ಔಜಿಕರ ಮಠದ ಶಾಲೆಯಲ್ಲಿ ಅಡುಗೆ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದು, ತಾಯಿಯನ್ನು ಕಳೆದುಕೊಂಡಿರುವ ಮಕ್ಕಳು ಹಾಗೂ ತಂದೆ ಬಂಧನಕ್ಕೊಳಗಾಗಿರುವ ಹಿನ್ನೆಲೆಯಲ್ಲಿ ಅವರ ಭವಿಷ್ಯದ ಬಗ್ಗೆ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಥಣಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಈ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
ಮುಖ್ಯಾಂಶಗಳು:
ಪತ್ನಿಯ ಮೇಲಿನ ಸಂಶಯದಿಂದ ಭೀಕರ ಹತ್ಯೆ
ಮಲಗಿದ್ದಲ್ಲೇ ಮಾರಕಾಸ್ತ್ರದಿಂದ ದಾಳಿ
ಮಹಿಳೆ ಸ್ಥಳದಲ್ಲೇ ಮೃತ್ಯು
ಆರೋಪಿ ಪತಿ ಬಂಧನ
ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
Post a Comment