ಧಾರವಾಡ: ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರ ಸಮಸ್ಯೆಗಳನ್ನು ಕಾಲಮಿತಿಯೊಳಗೆ ಪರಿಹರಿಸುವ ಮೂಲಕ ಜನಸ್ನೇಹಿ ಆಡಳಿತ ನೀಡಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳಬೇಕು. ಜನರ ಸಮಸ್ಯೆಗಳು ಮುಖ್ಯಮಂತ್ರಿಗಳ ಕಚೇರಿವರೆಗೆ ಹೋಗುವ ಪರಿಸ್ಥಿತಿ ಬರಬಾರದು. ಎಲ್ಲ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದರು.
ಸರ್ಕಾರದ ಅನುದಾನ ಬಳಕೆ, ನೈಸರ್ಗಿಕ ವಿಕೋಪಗಳ ಮುನ್ನೆಚ್ಚರಿಕೆ ಕ್ರಮ, ಸರ್ಕಾರಿ ಯೋಜನೆಗಳಡಿ ವಿತರಿಸಿದ ಸೌಲಭ್ಯಗಳ ಸರಿಯಾದ ಬಳಕೆ ಕುರಿತು ನಿರಂತರ ಪರಿಶೀಲನೆ ನಡೆಸಬೇಕು. ಸರ್ಕಾರಿ ಆಸ್ತಿಗಳು ಖಾಸಗಿಯವರ ಪಾಲಾಗದಂತೆ ಸರ್ಕಾರಿ ಜಮೀನು, ಮಹಾನಗರ ಪಾಲಿಕೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಆಸ್ತಿಗಳನ್ನು ಗುರುತಿಸಿ ರಕ್ಷಿಸಬೇಕು ಎಂದು ಸೂಚಿಸಿದರು.
ಯುವಕರಿಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗಾವಕಾಶ ಕಲ್ಪಿಸುವುದು, ಕೈಗಾರಿಕಾ ಪಾರ್ಕ್ ನಿರ್ಮಾಣಕ್ಕೆ ಜಾಗ ಗುರುತಿಸುವುದು ಹಾಗೂ ಸ್ಥಳೀಯರಿಗೆ ಉದ್ಯೋಗ ಸೃಷ್ಟಿಸುವ ಮೂಲಕ ವಲಸೆ ಕಡಿಮೆ ಮಾಡಲು ಕ್ರಮವಹಿಸಬೇಕು ಎಂದು ಹೇಳಿದರು.
ಶಾಲೆಗಳ ಸ್ಥಿತಿ ಪರಿಶೀಲನೆಗೆ ಸೂಚನೆ
ಜಿಲ್ಲೆಯಲ್ಲಿ ಯಾವುದೇ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಸ್ಪಷ್ಟಪಡಿಸಿದ ಜಿಲ್ಲಾಧಿಕಾರಿಗಳು, ಶಾಲಾ ಕಟ್ಟಡಗಳ ಸ್ಥಿತಿಗತಿ ಕುರಿತು ಜೂನ್ 25ರೊಳಗೆ ವರದಿ ನೀಡುವಂತೆ ಸೂಚಿಸಿದರು. ವಿದ್ಯಾರ್ಥಿಗಳಿಗೆ ಸಮವಸ್ತ್ರ, ಶೂ ವಿತರಣೆ ಹಾಗೂ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವ ಕಾರ್ಯಕ್ಕೆ ಆದ್ಯತೆ ನೀಡಬೇಕು ಎಂದರು.
ಸರ್ಕಾರಿ ನೌಕರರಿಗೆ ಕರ್ತವ್ಯ ಆ್ಯಪ್ ಹಾಜರಾತಿ ಕಡ್ಡಾಯ
ಜಿಲ್ಲೆಯ ಸರ್ಕಾರಿ ನೌಕರರು ಕರ್ತವ್ಯ ಆ್ಯಪ್ ಮೂಲಕ ಬೆಳಿಗ್ಗೆ 10 ಗಂಟೆ ಮತ್ತು ಸಂಜೆ 5 ಗಂಟೆಯ ನಂತರ ಕಡ್ಡಾಯವಾಗಿ ಹಾಜರಾತಿ ದಾಖಲಿಸಬೇಕು. ಅಧಿಕಾರಿಗಳು ಕೇಂದ್ರಸ್ಥಾನದಲ್ಲಿಯೇ ಇದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಸಾರ್ವಜನಿಕರನ್ನು ಮನೆಗೆ ಕರೆಸಿ ಕೆಲಸ ಮಾಡುವುದು ಸರಿಯಲ್ಲ ಎಂದು ಎಚ್ಚರಿಸಿದರು.
ಸೈಬರ್ ಅಪರಾಧ, ಡ್ರಗ್ಸ್ ನಿಯಂತ್ರಣಕ್ಕೆ ಕ್ರಮ
ಸೈಬರ್ ಅಪರಾಧ, ಆನ್‌ಲೈನ್ ಜೂಜಾಟ ಹಾಗೂ ಡ್ರಗ್ಸ್ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಕೋಮು ಸೌಹಾರ್ದತೆಗೆ ಧಕ್ಕೆ ತರುವ ಗುಂಪುಗಳ ವಿರುದ್ಧ ಕ್ರಮವಹಿಸಬೇಕು. ತಾಲೂಕುವಾರು ರೌಡಿ ಸ್ಕ್ವಾಡ್ ರಚಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
ಜನ ಸಂಪರ್ಕ ಸಭೆ ಮೂಲಕ ಸಮಸ್ಯೆ ಪರಿಹಾರ
ಜಿಲ್ಲೆಯ ಹೋಬಳಿ, ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಜನ ಸಂಪರ್ಕ ಸಭೆಗಳನ್ನು ಆಯೋಜಿಸಲಾಗುವುದು. ಅಧಿಕಾರಿಗಳು ಪೂರ್ವ ತಯಾರಿಯೊಂದಿಗೆ ಕಡ್ಡಾಯವಾಗಿ ಭಾಗವಹಿಸಬೇಕು. ಸಾರ್ವಜನಿಕರ ಸಮಸ್ಯೆಗಳ ಪರಿಹಾರದಲ್ಲಿ ಅನಗತ್ಯ ವಿಳಂಬ ಮಾಡಿದರೆ ಸಂಬಂಧಿಸಿದ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
100 ದಿನಗಳ ಅಭಿಯಾನಕ್ಕೆ ಒತ್ತು
ಯುವ ಉದ್ಯೋಗ ಸೇತು ಮಿಷನ್, ಭಾರತ್ ಜೋಡೊ ಯುವ ಕ್ಲಬ್, ಭೂ ಗ್ಯಾರಂಟಿ ಯೋಜನೆ, ಮನೆ ನಿವೇಶನ ವಿತರಣೆ ಅಭಿಯಾನ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಮಾತನಾಡಿ, ಗುಣಮಟ್ಟದ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುವುದು. ಶಾಲೆ, ಕಾಲೇಜು ಹಾಗೂ ಸರ್ಕಾರಿ ಕಟ್ಟಡಗಳ ಪರಿಶೀಲನೆ ನಡೆಸಲಾಗುವುದು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಮಾತನಾಡಿ, ಹಣ ಹೂಡಿಕೆ ಹೆಸರಿನಲ್ಲಿ ನಡೆಯುತ್ತಿರುವ ವಂಚನೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಇಂತಹ ಜಾಲಗಳು ಕಂಡುಬಂದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಪ್ರೊಬೇಷನರಿ ಐಎಎಸ್ ಅಧಿಕಾರಿ ಅನುಪ್ರಿಯಾ ಸಾಕ್ಯಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಶೇಖ್ ಅಬ್ದುಲ್ ಅಲಿಮ್ ಸಿದ್ದಿಕಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Post a Comment