ರಾಯಬಾಗ, ಜೂ.29: ಪಟ್ಟಣದ ಸಹರಾ ಖಾನಾವಳಿಯಲ್ಲಿ ಗ್ರಾಹಕರಿಗೆ ನೀಡಿದ್ದ ಊಟದ ತಟ್ಟೆಯಲ್ಲಿ ಹಲ್ಲಿ ಬಿದ್ದಿರುವ ಘಟನೆ ಬೆಳಕಿಗೆ ಬಂದ ಬೆನ್ನಲ್ಲೇ ತಾಲೂಕು ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದೆ.
ತಾಲೂಕು ಆರೋಗ್ಯ ಅಧಿಕಾರಿ ಎಸ್.ಎಂ. ಪಾಟೀಲ್ ನೇತೃತ್ವದ ಅಧಿಕಾರಿಗಳ ತಂಡ ಹೋಟೆಲ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಈ ವೇಳೆ ಅಡುಗೆಮನೆ, ಆಹಾರ ತಯಾರಿಕೆ, ಸ್ವಚ್ಛತಾ ವ್ಯವಸ್ಥೆ ಹಾಗೂ ಆಹಾರ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿ, ಹೋಟೆಲ್ ಆಡಳಿತದಿಂದ ಅಗತ್ಯ ಮಾಹಿತಿ ಪಡೆದುಕೊಂಡರು.
ಪರಿಶೀಲನೆಯ ವೇಳೆ ಕೆಲವು ಲೋಪಗಳು ಕಂಡುಬಂದ ಹಿನ್ನೆಲೆಯಲ್ಲಿ ಹೋಟೆಲ್ ಮಾಲೀಕರಿಗೆ ನೋಟಿಸ್ ಜಾರಿ ಮಾಡಲಾಗಿದೆ. ನೋಟಿಸ್‌ಗೆ ಸಮರ್ಪಕ ಉತ್ತರ ನೀಡುವಂತೆ ಸೂಚಿಸಲಾಗಿದ್ದು, ನಿಯಮ ಉಲ್ಲಂಘನೆ ದೃಢಪಟ್ಟಲ್ಲಿ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಕಾಯ್ದೆಯಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಈ ಘಟನೆ ಸಾರ್ವಜನಿಕರಲ್ಲಿ ಆಹಾರದ ಗುಣಮಟ್ಟ ಮತ್ತು ಸ್ವಚ್ಛತೆಯ ಕುರಿತು ಆತಂಕ ಮೂಡಿಸಿದ್ದು, ಹೋಟೆಲ್‌ಗಳು ಆಹಾರ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ.
إرسال تعليق