ಹುಬ್ಬಳ್ಳಿ, ಜು. 6: ಹಳೇ ಹುಬ್ಬಳ್ಳಿಯಲ್ಲಿ ನಿರ್ಮಾಣಗೊಂಡಿರುವ 100 ಹಾಸಿಗೆಗಳ ಅತ್ಯಾಧುನಿಕ ಆಸ್ಪತ್ರೆಯ ಕಟ್ಟಡ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಸಾರ್ವಜನಿಕರ ಸೇವೆಗೆ ಲಭ್ಯವಾಗಲಿದೆ. ಆಸ್ಪತ್ರೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಸ್ಲಂ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ತಿಳಿಸಿದ್ದಾರೆ.
ಆಸ್ಪತ್ರೆಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಆಸ್ಪತ್ರೆಯ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಉಳಿದಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಆಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಸಜ್ಜುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಆಸ್ಪತ್ರೆಯಲ್ಲಿ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿ ಕಾಯಿಲೆಗಳು, ಗರ್ಭಿಣಿಯರ ಆರೈಕೆ, ಮಕ್ಕಳ ಆರೋಗ್ಯ ಸೇವೆ, ಶಸ್ತ್ರಚಿಕಿತ್ಸೆ, ಕಣ್ಣಿನ ಚಿಕಿತ್ಸೆ, ಕ್ಷಯರೋಗ, ಕುಷ್ಠರೋಗ, ಡೆಂಗಿ, ಮಲೇರಿಯಾ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳಿಗೆ ಸಮಗ್ರ ವೈದ್ಯಕೀಯ ಸೇವೆ ಒದಗಿಸಲಾಗುವುದು ಎಂದು ಅವರು ಹೇಳಿದರು.
ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ 12 ಆರೋಗ್ಯ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಇನ್ನೂ ಐದು ಹೊಸ 'ನಮ್ಮ ಕ್ಲಿನಿಕ್' ಆರಂಭಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶೀಘ್ರದಲ್ಲೇ ಅವುಗಳಿಗೆ ಅನುಮೋದನೆ ದೊರೆಯುವ ನಿರೀಕ್ಷೆಯಿದೆ ಎಂದು ತಿಳಿಸಿದರು.
ಶಿಕ್ಷಣ ಕ್ಷೇತ್ರಕ್ಕೂ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದ್ದು, ಬಿಡನಾಳದಲ್ಲಿ ನೂತನ ಸರ್ಕಾರಿ ಪದವಿ ಪೂರ್ವ ಕಾಲೇಜು ಆರಂಭವಾಗಿದೆ. ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳು ಕಾರ್ಯನಿರ್ವಹಿಸುತ್ತಿದ್ದು, ಕಾಲೇಜಿನ ನೂತನ ಕಟ್ಟಡವನ್ನು ಮುಖ್ಯಮಂತ್ರಿ ಶೀಘ್ರದಲ್ಲೇ ಉದ್ಘಾಟಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಪರಿಶೀಲನೆ ವೇಳೆ ಪಾಲಿಕೆ ಆಯುಕ್ತ ಡಾ. ರುದ್ರೇಶ್ ಘಾಳಿ, ಅಧೀಕ್ಷಕ ಇಂಜಿನಿಯರ್ ಆರ್. ವಿಜಯಕುಮಾರ, ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಗೀತಾ ಚವ್ಹಾಣ, ಪಾಲಿಕೆ ಮುಖ್ಯ ಆರೋಗ್ಯ ಅಧಿಕಾರಿ ಡಾ. ಶ್ರೀಧರ ದಂಡಪ್ಪನವರ, ಎಇಇಗಳಾದ ಹರೀಶ ಮತ್ತು ನಾಗರಾಜ, ಪಾಲಿಕೆ ಮಾಜಿ ಸದಸ್ಯ ಅಲ್ತಾಫ್ ಕಿತ್ತೂರು, ನಾಮನಿರ್ದೇಶಿತ ಸದಸ್ಯ ಸಂತೋಷ ಪೂಜಾರ ಸೇರಿದಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
Post a Comment