ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ವಿವಿಧ ಪ್ರದೇಶಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡುವ ನಿಟ್ಟಿನಲ್ಲಿ ಶಾಸಕ ಪ್ರಸಾದ ಅಬ್ಬಯ್ಯ ಅವರು ಒಟ್ಟು ₹4 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.
ಮಳೆಗಾಲದಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ವಾರ್ಡ್ ಸಂಖ್ಯೆ 60ರ ಮೇದಾರ ಓಣಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ₹2 ಕೋಟಿ ಅನುದಾನದಲ್ಲಿ ನಾಲಾ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಯಿತು.
ಇದೇ ವೇಳೆ ಲೋಕೋಪಯೋಗಿ ಇಲಾಖೆಯ ₹1 ಕೋಟಿ ಅನುದಾನದಲ್ಲಿ ಮೇದಾರ ಓಣಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೂ ಚಾಲನೆ ನೀಡಲಾಯಿತು. ಅಲ್ಲದೆ ಮುಖ್ಯಮಂತ್ರಿ ವಿಶೇಷ ಅನುದಾನದಡಿ ₹1 ಕೋಟಿ ವೆಚ್ಚದಲ್ಲಿ ಮಸ್ತಾನಸೋಪಾ ಎನ್.ಎ ನಗರದಲ್ಲಿ ತೆರೆದ ಚರಂಡಿ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗೂ ಶಾಸಕ ಪ್ರಸಾದ ಅಬ್ಬಯ್ಯ ಅವರು ಶಂಕುಸ್ಥಾಪನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಪ್ರಸಾದ ಅಬ್ಬಯ್ಯ, ಅಭಿವೃದ್ಧಿ ಕಾಮಗಾರಿಗಳು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳ್ಳಬೇಕು. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಧಿಕಾರಿಗಳು ನಿರಂತರವಾಗಿ ಕಾಮಗಾರಿಗಳ ಮೇಲ್ವಿಚಾರಣೆ ವಹಿಸಬೇಕು ಎಂದು ಸೂಚಿಸಿದರು.
ಕಾರ್ಯಕ್ರಮದಲ್ಲಿ ಸ್ಥಳೀಯ ಪಾಲಿಕೆ ಸದಸ್ಯರು, ಪಕ್ಷದ ಪ್ರಮುಖ ಮುಖಂಡರು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
إرسال تعليق