ನವಲಗುಂದ, ಜು. 6: ತಾಲ್ಲೂಕಿನ ಚಿಲಕವಾಡ ಗ್ರಾಮದಲ್ಲಿ ಜೀರ್ಣೋದ್ಧಾರಗೊಂಡಿರುವ ನೂತನ ಶ್ರೀ ಮಾರುತಿ ದೇವಸ್ಥಾನದ ಉದ್ಘಾಟನೆ, ಮೂರ್ತಿ ಪ್ರಾಣಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಮಹೋತ್ಸವವು ಜುಲೈ 7 ಮತ್ತು 8ರಂದು ಅತ್ಯಂತ ವೈಭವದಿಂದ ನಡೆಯಲಿದ್ದು, ಗ್ರಾಮದಲ್ಲಿ ಧಾರ್ಮಿಕ ಸಂಭ್ರಮ ಮನೆ ಮಾಡಿದೆ.
ದೇವಸ್ಥಾನ ಟ್ರಸ್ಟ್ ಕಮೀಟಿ ಅಧ್ಯಕ್ಷ ಕೆ.ವಿ. ಹುಲಕೋಟಿ ಮಾತನಾಡಿ, ಗ್ರಾಮಸ್ಥರ ಸಹಕಾರ ಹಾಗೂ ಸರ್ಕಾರದ ಅನುದಾನದೊಂದಿಗೆ ಸುಮಾರು ₹1.20 ಕೋಟಿ ವೆಚ್ಚದಲ್ಲಿ ಚಿಕ್ಕಬಳ್ಳಾಪುರ ಕಲ್ಲಿನಿಂದ ಸುಂದರ ಮತ್ತು ಭವ್ಯ ದೇವಾಲಯವನ್ನು ನಿರ್ಮಿಸಲಾಗಿದೆ ಎಂದು ತಿಳಿಸಿದರು.
ಎರಡು ದಿನಗಳ ಕಾಲ ನಡೆಯಲಿರುವ ಈ ಮಹೋತ್ಸವದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು, ವಿಶೇಷ ಪೂಜೆಗಳು, ಮೂರ್ತಿ ಪ್ರಾಣಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಲಿವೆ. ಈ ಪವಿತ್ರ ಕಾರ್ಯಕ್ರಮಕ್ಕೆ ಹಿರೇಮಠದ ಇಮ್ಮಡಿ ಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ಸತೀಶ್ ಜಾರಕಿಹೊಳಿ, ಸಂಸದ ಬಸವರಾಜ ಬೊಮ್ಮಾಯಿ, ಶಾಸಕ ಎನ್.ಎಚ್. ಕೋನರಡ್ಡಿ ಸೇರಿದಂತೆ ಹಲವು ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗಣ್ಯರು ಭಾಗವಹಿಸುವ ನಿರೀಕ್ಷೆಯಿದೆ.
ಇದರೊಂದಿಗೆ ಧಾರವಾಡ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕರಡಿ ಮಜಲು, ಮಹಿಳೆಯರಿಂದ ಡೊಳ್ಳಿನ ಮಜಲು ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಮಹೋತ್ಸವದ ಮೆರುಗು ಇನ್ನಷ್ಟು ಹೆಚ್ಚಿಸಲಿವೆ.
ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ಮಾರುತಿಯ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನ ಟ್ರಸ್ಟ್ ಕಮೀಟಿ ಮನವಿ ಮಾಡಿದೆ.
Post a Comment