⚡ಟ್ರೆಂಡಿಂಗ್

ಅಣ್ಣಿಗೇರಿಯಲ್ಲಿ ಗ್ಯಾಸ್ ಗೀಸರ್ ಸಿಲಿಂಡರ್ ಸೋರಿಕೆ ದುರಂತ: ತಾಯಿ, ಇಬ್ಬರು ಮಕ್ಕಳಿಗೆ ಗಂಭೀರ ಗಾಯ


ಅಣ್ಣಿಗೇರಿ, ಜು. 19: ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಉದಯನಗರದಲ್ಲಿ ಗ್ಯಾಸ್ ಗೀಸರ್‌ಗೆ ಅಳವಡಿಸಲಾಗಿದ್ದ ಸಿಲಿಂಡರ್‌ನಿಂದ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಒಂದೇ ಕುಟುಂಬದ ಮೂವರು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಭಾನುವಾರ ಬೆಳಗಿನ ಜಾವ ಸಂಭವಿಸಿದೆ.

ಗಾಯಗೊಂಡವರನ್ನು ಸಾಹೀರಾಬಾನು ಧಾರವಾಡ (55), ಅಬ್ಬಾಸ್ ಅಲಿ ಧಾರವಾಡ (29) ಹಾಗೂ ಹಸನಸಾಬ್ ಧಾರವಾಡ (26) ಎಂದು ಗುರುತಿಸಲಾಗಿದೆ. ಮೂವರನ್ನೂ ತಕ್ಷಣವೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಮಾಹಿತಿಯ ಪ್ರಕಾರ, ಇಂದು ಬೆಳಗಿನ ಜಾವ ಸುಮಾರು 5 ಗಂಟೆ ವೇಳೆಗೆ ಮನೆಯಲ್ಲಿದ್ದ ಗ್ಯಾಸ್ ಗೀಸರ್‌ಗೆ ಸಂಪರ್ಕ ಕಲ್ಪಿಸಲಾಗಿದ್ದ ಸಿಲಿಂಡರ್‌ನಿಂದ ಗ್ಯಾಸ್ ಸೋರಿಕೆಯಾಗಿದೆ. ಇದರಿಂದ ಏಕಾಏಕಿ ಬೆಂಕಿ ಕಾಣಿಸಿಕೊಂಡು ಮನೆಯೊಳಗಿದ್ದ ಮೂವರು ತೀವ್ರವಾಗಿ ಸುಟ್ಟು ಗಾಯಗೊಂಡಿದ್ದಾರೆ. ಬೆಂಕಿಯ ತೀವ್ರತೆಗೆ ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಅಣ್ಣಿಗೇರಿ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಅವರ ಸಮಯೋಚಿತ ಕಾರ್ಯಾಚರಣೆಯಿಂದ ಬೆಂಕಿ ಪಕ್ಕದ ಮನೆಗಳಿಗೆ ವ್ಯಾಪಿಸುವುದನ್ನು ತಡೆಯಲಾಗಿದ್ದು, ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದೆ.

ದುರಂತದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಗುಂಜನ್ ಆರ್ಯ, ತಹಶೀಲ್ದಾರ್ ಮಂಜುನಾಥ ದಾಸಪ್ಪನವರ, ಪುರಸಭೆ ಮುಖ್ಯಾಧಿಕಾರಿ ವೈ.ಜಿ. ಗದ್ದಿಗೌಡರ ಹಾಗೂ ಅಣ್ಣಿಗೇರಿ ಪೊಲೀಸ್ ಠಾಣೆಯ ಪಿಎಸ್‌ಐ ಉಮಾದೇವಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಾಥಮಿಕ ತನಿಖೆ ಪ್ರಕಾರ ಗ್ಯಾಸ್ ಸೋರಿಕೆಯಿಂದಲೇ ಈ ಅಗ್ನಿ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಅಣ್ಣಿಗೇರಿ ಪೊಲೀಸರು ಘಟನೆಯ ನಿಖರ ಕಾರಣ ಪತ್ತೆಹಚ್ಚಲು ಮುಂದಿನ ತನಿಖೆ ಕೈಗೊಂಡಿದ್ದಾರೆ.

Post a Comment

أحدث أقدم
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...