ನವಲಗುಂದ, ಜು.11: ಮಹದಾಯಿ ಕಳಸಾ-ಬಂಡೂರಿ ಜೋಡಣೆ ಯೋಜನೆಯಡಿ ನ್ಯಾಯಾಧಿಕರಣದ ತೀರ್ಪಿನಂತೆ ಕರ್ನಾಟಕಕ್ಕೆ ಬಾಕಿ ಇರುವ ನೀರನ್ನು ತಕ್ಷಣ ಒದಗಿಸಿ, ವಿಳಂಬವಿಲ್ಲದೆ ಕಾಮಗಾರಿ ಆರಂಭಿಸಬೇಕು ಎಂದು ಆಗ್ರಹಿಸಿ ನವಲಗುಂದದ ಮಹದಾಯಿ ಕಳಸಾ-ಬಂಡೂರಿ ರೈತ ಹೋರಾಟ ವೇದಿಕೆ ವತಿಯಿಂದ ಕೇಂದ್ರ ಸರ್ಕಾರ ಹಾಗೂ ರಾಜ್ಯದ ಉಪಮುಖ್ಯಮಂತ್ರಿ ಹಾಗೂ ನೀರಾವರಿ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ತಹಶೀಲ್ದಾರ್ ಕಚೇರಿ ಮೂಲಕ ಮನವಿ ಸಲ್ಲಿಸಲಾಯಿತು.
ರೈತ ಮುಖಂಡರು ಮಾತನಾಡಿ, ಕಳಸಾ-ಬಂಡೂರಿ ಯೋಜನೆಗೆ ಯಾವುದೇ ಕಾನೂನು ಅಡ್ಡಿಯಿಲ್ಲ ಎಂದು ಸರ್ಕಾರಿ ವಕೀಲ ಮೋಹನ ಕಾತರಕಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಆದ್ದರಿಂದ ಯೋಜನೆಯ ಕಾಮಗಾರಿಯನ್ನು ಮತ್ತಷ್ಟು ವಿಳಂಬ ಮಾಡದೆ ತಕ್ಷಣವೇ ಆರಂಭಿಸಬೇಕು ಎಂದು ಒತ್ತಾಯಿಸಿದರು.
ಎತ್ತಿನಹೊಳೆ ಯೋಜನೆಯ ಮಾದರಿಯನ್ನು ಅನುಸರಿಸಿ, ಅರಣ್ಯ ಹಾಗೂ ವನ್ಯಜೀವಿಗಳಿಗೆ ಯಾವುದೇ ತೊಂದರೆಯಾಗದಂತೆ ಮುಚ್ಚಿದ ಕಾಲುವೆ ನಿರ್ಮಾಣಕ್ಕೆ ಸರ್ಕಾರ ಕ್ರಮ ಕೈಗೊಂಡಿರುವುದು ಸ್ವಾಗತಾರ್ಹ. ಇದೇ ಮಾದರಿಯಲ್ಲಿ ಕಳಸಾ-ಬಂಡೂರಿ ಯೋಜನೆಗೂ ಕೇಂದ್ರ ಸರ್ಕಾರದಿಂದ ಅಗತ್ಯ ಅನುಮತಿ ಪಡೆದು, ಟೆಂಡರ್‌ದಾರರೊಂದಿಗೆ ಚರ್ಚಿಸಿ ಶೀಘ್ರ ಕಾಮಗಾರಿ ಆರಂಭಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಇದೇ ವೇಳೆ, ನವಲಗುಂದ ತಾಲೂಕಿನಲ್ಲಿ ಸಮರ್ಪಕ ಮಳೆಯಾಗದ ಕಾರಣ ಬೆಳೆಗಳು ಒಣಗುತ್ತಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ಸರ್ಕಾರ ತಕ್ಷಣವೇ ಮೋಡ ಬಿತ್ತನೆ (Cloud Seeding) ಕಾರ್ಯ ಕೈಗೊಂಡು ರೈತರ ನೆರವಿಗೆ ಧಾವಿಸಬೇಕು ಎಂದು ರೈತರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ರೈತ ಹೋರಾಟಗಾರರಾದ ಯಲ್ಲಪ್ಪ ಧಾಡಿಭಾವಿ, ಸುಭಾಸಗೌಡ ಪಾಟೀಲ, ಬಸನಗೌಡ ಫಕೀರಗೌಡ್ರ, ಬಾಂಬೆ ಮೇಸ್ತ್ರಿ, ಚಾಹುಸೇನಿ, ಭೀಮಪ್ಪ ಹಿರೇಗಣ್ಣವರ ಸೇರಿದಂತೆ ಹಲವು ರೈತ ಮುಖಂಡರು ಉಪಸ್ಥಿತರಿದ್ದರು.
Post a Comment