ಧಾರವಾಡ, ಜುಲೈ 30: ಶಿವಶರಣ ಹಡಪದ ಅಪ್ಪಣ್ಣರು ಜಾತಿ-ಭೇದವಿಲ್ಲದ ಸಮಾನತೆಯ ಸಮಾಜ ನಿರ್ಮಾಣಕ್ಕೆ ತಮ್ಮ ಜೀವನವನ್ನೇ ಸಮರ್ಪಿಸಿದ ಮಹಾನ್ ಸಂತರು. ಅವರ ತತ್ವಗಳು ಇಂದಿನ ಸಮಾಜಕ್ಕೂ ಮಾರ್ಗದರ್ಶಿಯಾಗಿವೆ ಎಂದು ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ್ ಸನದಿ ಹೇಳಿದರು.
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಲೂರ ವೆಂಕಟರಾವ್ ಭವನದಲ್ಲಿ ಆಯೋಜಿಸಿದ್ದ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಿವಶರಣ ಹಡಪದ ಅಪ್ಪಣ್ಣರು ಸಮಾನತೆ, ಕಾಯಕ, ದಾಸೋಹ ಹಾಗೂ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸುವ ಮೂಲಕ ಸಮಾಜದಲ್ಲಿ ಸೌಹಾರ್ದತೆ ಮತ್ತು ಸಹಬಾಳ್ವೆಯನ್ನು ಬೆಳೆಸುವ ಸಂದೇಶ ನೀಡಿದರು. ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಕೀರ್ ಸನದಿ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಕಾಶ ಹಳಿಯಾಳ, ಹಡಪದ ಅಪ್ಪಣ್ಣನವರ ಶ್ರದ್ಧೆ, ಭಕ್ತಿ ಹಾಗೂ ಪ್ರಾಮಾಣಿಕ ಕಾಯಕ ಎಲ್ಲರಿಗೂ ಆದರ್ಶಪ್ರಾಯವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಡಾ. ಈರಣ್ಣ ಇಂಜಗನೇರಿ ಅವರು ಶಿವಶರಣ ಹಡಪದ ಅಪ್ಪಣ್ಣರ ಜೀವನ, ವಚನ ಸಾಹಿತ್ಯ ಮತ್ತು ಸಾಮಾಜಿಕ ಚಿಂತನೆಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಇದೇ ವೇಳೆ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಶೇ.95 ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ವಿವಿಧ ಗಣ್ಯರು, ಅಧಿಕಾರಿಗಳು, ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದು, ಶಿವಶರಣ ಹಡಪದ ಅಪ್ಪಣ್ಣರ ಆದರ್ಶಗಳನ್ನು ಸಮಾಜದಲ್ಲಿ ಅಳವಡಿಸಿಕೊಳ್ಳುವ ಸಂಕಲ್ಪ ವ್ಯಕ್ತಪಡಿಸಿದರು.
Post a Comment