ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವ ಅಧಿಕಾರ ರಾಜ್ಯಕ್ಕಿಲ್ಲ: ಸಂಸದ ಜಗದೀಶ್ ಶೆಟ್ಟರ್
ಹುಬ್ಬಳ್ಳಿ: ಶಾಶ್ವತ ನಿವಾಸ ಪ್ರಮಾಣಪತ್ರ ಹಾಗೂ ಪೌರತ್ವ ನೀಡುವ ಅಧಿಕಾರ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಸೇರಿದ್ದು, ರಾಜ್ಯ ಸರ್ಕಾರಕ್ಕೆ ಅಂತಹ ಅಧಿಕಾರವಿಲ್ಲ ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಜನಗಣತಿ ಹಾಗೂ ಶಾಶ್ವತ ನಿವಾಸ ಪ್ರಮಾಣಪತ್ರದಂತಹ ವಿಷಯಗಳಿಗೆ ಸಾಂವಿಧಾನಿಕ ಮತ್ತು ಕಾನೂನುಬದ್ಧ ಮಾನ್ಯತೆ ಅಗತ್ಯವಾಗಿದ್ದು, ರಾಜ್ಯ ಸರ್ಕಾರ ಈ ರೀತಿಯ ಕ್ರಮ ಕೈಗೊಂಡರೆ ಅದು ನ್ಯಾಯಾಲಯದಲ್ಲಿ ಪ್ರಶ್ನೆಗೆ ಒಳಗಾಗಿ ರದ್ದಾಗುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟರು.
ರಾಜ್ಯ ಸರ್ಕಾರದ ಗೃಹ ಇಲಾಖೆ ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಪತ್ತೆ ಹಚ್ಚುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ ಶೆಟ್ಟರ್, ಮತಬ್ಯಾಂಕ್ ರಾಜಕಾರಣಕ್ಕಾಗಿ ತುಷ್ಟೀಕರಣದ ನೀತಿ ಅನುಸರಿಸಲಾಗುತ್ತಿದೆ ಎಂದು ಟೀಕಿಸಿದರು.
ಇದೇ ವೇಳೆ, "ಬಾಂಗ್ಲಾದೇಶಿ ನಾಗರಿಕರಿಗೆ ಪೌರತ್ವ ನೀಡಿಲ್ಲ" ಎಂಬ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರ ಮೌಖಿಕ ಹೇಳಿಕೆಯನ್ನು ನಂಬಲು ಸಾಧ್ಯವಿಲ್ಲ. ಈ ಕುರಿತು ರಾಜ್ಯ ಸರ್ಕಾರವು ಕೇಂದ್ರ ಗೃಹ ಸಚಿವರಿಗೆ ಅಧಿಕೃತವಾಗಿ ಲಿಖಿತ ಪತ್ರ ಬರೆದು ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಅವರು ಆಗ್ರಹಿಸಿದರು.
ಶಾಶ್ವತ ನಿವಾಸ ಪ್ರಮಾಣಪತ್ರ ಮತ್ತು ಪೌರತ್ವದಂತಹ ವಿಷಯಗಳಲ್ಲಿ ರಾಜ್ಯ ಸರ್ಕಾರ ಸಂವಿಧಾನ ಹಾಗೂ ಕಾನೂನು ವ್ಯಾಪ್ತಿಯೊಳಗೆ ನಡೆದುಕೊಳ್ಳಬೇಕು ಎಂದು ಶೆಟ್ಟರ್ ಒತ್ತಾಯಿಸಿದರು.
Post a Comment