ವಿಜಯಪುರ: ಮಳೆಯ ಕೊರತೆಯಿಂದ ಬೆಳೆ ಕೈಕೊಟ್ಟು, ಸಾಲದ ಹೊರೆ ತಾಳಲಾರದೆ ರೈತರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತಡವಲಗಾ ಗ್ರಾಮದಲ್ಲಿ ನಡೆದಿದೆ.
ಮೃತ ರೈತನನ್ನು ನಾಗಪ್ಪ ಭೀಮಶ್ಯಾ ಅಥರ್ಗಾ (57) ಎಂದು ಗುರುತಿಸಲಾಗಿದೆ. ಗ್ರಾಮದ ತೋಟದ ವಸತಿಯಲ್ಲಿ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಾಹಿತಿಯ ಪ್ರಕಾರ, ನಾಗಪ್ಪ ಅವರು ಕೋಟಕ್ ಮಹೀಂದ್ರ ಬ್ಯಾಂಕ್‌ನಲ್ಲಿ ಸುಮಾರು ₹15 ಲಕ್ಷ, ತಡವಲಗಾ ಸಹಕಾರಿ ಸಂಘದಲ್ಲಿ ₹65 ಸಾವಿರ ಹಾಗೂ ಖಾಸಗಿಯಾಗಿ ಸುಮಾರು ₹5 ಲಕ್ಷ ಸಾಲ ಪಡೆದಿದ್ದರು ಎನ್ನಲಾಗಿದೆ. ಮಳೆಯ ಕೊರತೆಯಿಂದ ಕಬ್ಬಿನ ಬೆಳೆ ಸಂಪೂರ್ಣ ಒಣಗಿ ಹೋಗಿದ್ದು, ಸಾಲವನ್ನು ಹೇಗೆ ತೀರಿಸುವುದು ಎಂಬ ತೀವ್ರ ಆತಂಕದಿಂದ ಮನನೊಂದು ಈ ಕೃತ್ಯ ಎಸಗಿರಬಹುದೆಂದು ಶಂಕಿಸಲಾಗಿದೆ.
ಘಟನೆ ಸಂಬಂಧ ಹೊರ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬ ಕುರಿತು ತನಿಖೆ ಮುಂದುವರಿದಿದೆ.
ಈ ದುರ್ಘಟನೆಯ ಹಿನ್ನೆಲೆಯಲ್ಲಿ ಮೃತ ರೈತನ ಕುಟುಂಬಕ್ಕೆ ಸರ್ಕಾರ ತಕ್ಷಣ ಸೂಕ್ತ ಪರಿಹಾರ ಘೋಷಿಸಬೇಕು, ರೈತನ ಮೇಲಿದ್ದ ಸಾಲವನ್ನು ಮನ್ನಾ ಮಾಡಬೇಕು ಹಾಗೂ ಕುಟುಂಬದ ಸದಸ್ಯರಿಗೆ ಅಗತ್ಯ ಆರ್ಥಿಕ ನೆರವು ಮತ್ತು ಪುನರ್ವಸತಿ ಸೌಲಭ್ಯಗಳನ್ನು ಒದಗಿಸಬೇಕು ಎಂದು ಸ್ಥಳೀಯ ರೈತರು ಹಾಗೂ ಗ್ರಾಮಸ್ಥರು ಆಗ್ರಹಿಸಿದ್ದಾರೆ.
Post a Comment