ಕಾಮಗಾರಿ ವೇಳೆ ಕಾರ್ಮಿಕ ಸಾವು: ಕಠಿಣ ಕ್ರಮ ಹಾಗೂ ಪರಿಹಾರಕ್ಕೆ ಶಂಕರ ಪಾಟೀಲ ಮುನೇನಕೊಪ್ಪ ಆಗ್ರಹ
ಹುಬ್ಬಳ್ಳಿ, ಜು. 4: ಹುಬ್ಬಳ್ಳಿಯ ಗುಜರಾತ್ ಭವನದ ಸಮೀಪ ನಡೆಯುತ್ತಿದ್ದ ಕಾಮಗಾರಿ ವೇಳೆ ನವಲಗುಂದ ವಿಧಾನಸಭಾ ಕ್ಷೇತ್ರದ ಹಳ್ಳಿಕೇರಿ ಗ್ರಾಮದ ಮಲ್ಲಪ್ಪ ಜೋಗಿನ ಎಂಬ ಕಾರ್ಮಿಕ ಮೃತಪಟ್ಟಿರುವ ಘಟನೆಗೆ ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಘಟನೆಗೆ ಕಾರಣವಾದ ಗುತ್ತಿಗೆದಾರರ ನಿರ್ಲಕ್ಷ್ಯವನ್ನು ಖಂಡಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
"ಬದುಕಿನ ಆಸರೆಯಾಗಿ ದುಡಿಯಲು ಬರುವ ಬಡ ಕಾರ್ಮಿಕರ ಸುರಕ್ಷತೆ ಖಚಿತಪಡಿಸುವ ಜವಾಬ್ದಾರಿ ಗುತ್ತಿಗೆದಾರರ ಮೇಲಿದೆ. ಅದನ್ನು ನಿರ್ಲಕ್ಷಿಸಿ ಅಮಾಯಕರ ಜೀವದೊಂದಿಗೆ ಚೆಲ್ಲಾಟವಾಡುವುದು ಯಾವುದೇ ಕಾರಣಕ್ಕೂ ಸಮರ್ಥನೀಯವಲ್ಲ. ಈ ದುರಂತಕ್ಕೆ ಕಾರಣರಾದವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಬೇಕು" ಎಂದು ಅವರು ಹೇಳಿದ್ದಾರೆ.
ಮೃತ ಕಾರ್ಮಿಕನ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿದ ಮುನೇನಕೊಪ್ಪ, ಗುತ್ತಿಗೆದಾರರಿಂದ ತಕ್ಷಣವೇ ಸೂಕ್ತ ಪರಿಹಾರ ನೀಡುವಂತೆ ಹಾಗೂ ರಾಜ್ಯ ಸರ್ಕಾರವೂ ಮಾನವೀಯತೆ ದೃಷ್ಟಿಯಿಂದ ಪರಿಹಾರ ಧನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಕಾರ್ಮಿಕರ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದು ಇಂತಹ ದುರಂತಗಳು ಮರುಕಳಿಸದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
Post a Comment