ಸಭೆಯಲ್ಲಿ ಮಾತನಾಡಿದ ಅವರು, ಕಾವೇರಿ ವಿವಾದ ರಾಜ್ಯಕ್ಕೆ ಹೊಸದಲ್ಲ. ರಾಜ್ಯದ ಹಿತಾಸಕ್ತಿ ವಿಚಾರ ಬಂದಾಗ ರಾಜಕೀಯ ಭೇದಗಳನ್ನು ಮರೆತು ಎಲ್ಲಾ ಪಕ್ಷಗಳು ಒಂದಾಗಿ ನಿಲ್ಲುವ ಪರಂಪರೆ ಕರ್ನಾಟಕಕ್ಕಿದೆ ಎಂದು ಹೇಳಿದರು. ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡುವುದು ಸರ್ಕಾರದ ಸ್ಪಷ್ಟ ನಿಲುವಾಗಿದ್ದು, ರಾಜ್ಯದಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆ ಉಂಟಾಗದಂತೆ ಅಗತ್ಯ ಪ್ರಮಾಣದ ನೀರನ್ನು ಸಂಗ್ರಹಿಸಿಡಲಾಗಿದೆ ಎಂದು ತಿಳಿಸಿದರು.
ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಹಾಗೂ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (CWMA) ಸಭೆಗಳಿಗೂ ಮುನ್ನ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಹಾಗೂ ವಿ. ಸೋಮಣ್ಣ, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮತ್ತು ಜಗದೀಶ್ ಶೆಟ್ಟರ್ ಸೇರಿದಂತೆ ಹಲವು ನಾಯಕರನ್ನು ಭೇಟಿ ಮಾಡಿ ರಾಜ್ಯದ ನಿಲುವನ್ನು ಮನವರಿಕೆ ಮಾಡಿಕೊಟ್ಟಿರುವುದಾಗಿ ಹೇಳಿದರು. ರಾಜ್ಯದ ಪರವಾಗಿ ಧ್ವನಿಯೆತ್ತಿದ ಎಲ್ಲಾ ನಾಯಕರಿಗೂ ಹಾಗೂ ಸಂಸದರಿಗೆ ಧನ್ಯವಾದಗಳನ್ನು ಅರ್ಪಿಸಿದರು.
ತಮಿಳುನಾಡು 9.9 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದು, ಈ ಕುರಿತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವೂ ಸೂಚನೆ ನೀಡಿತ್ತು. ಆದರೆ ರಾಜ್ಯದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಈಗಾಗಲೇ ಮೇಲ್ಮನವಿ ಸಲ್ಲಿಸಿದೆ ಎಂದು ತಿಳಿಸಿದರು.
ಕೊಡಗು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿದೆ. ಪ್ರಸ್ತುತ ರಾಜ್ಯದಲ್ಲಿ 57 ಟಿಎಂಸಿ ನೀರು ಲಭ್ಯವಿದ್ದು, ಕಬಿನಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಹೆಚ್ಚುವರಿ ನೀರನ್ನು ಸಂಗ್ರಹಿಸಲು ಸಾಧ್ಯವಾಗದ ಕಾರಣ ಸಹಜ ಹರಿವು ಮುಂದುವರಿದಿದೆ ಎಂದು ವಿವರಿಸಿದರು.
ರಾಜ್ಯದ ಕುಡಿಯುವ ನೀರಿನ ಅಗತ್ಯವನ್ನು ಭದ್ರಪಡಿಸುವುದರ ಜೊತೆಗೆ ರೈತರ ಹಿತವನ್ನೂ ಸರ್ಕಾರ ಗಮನದಲ್ಲಿಟ್ಟುಕೊಂಡಿದೆ. ಈಗಾಗಲೇ ಕೆ.ಆರ್.ಎಸ್. ಹಾಗೂ ಕಬಿನಿ ನಾಲೆಗಳಿಗೆ ನೀರು ಹರಿಸಲಾಗಿದ್ದು, ಇದರಿಂದ ಬೆಳೆ ರಕ್ಷಣೆಗೆ ಅನುಕೂಲವಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ರಾಜ್ಯ ಸಚಿವರು, ವಿರೋಧ ಪಕ್ಷದ ನಾಯಕರು, ಸಂಸದರು, ಕಾನೂನು ತಜ್ಞರು, ಹಿರಿಯ ಅಧಿಕಾರಿಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಭಾಗವಹಿಸಿ ಕಾವೇರಿ ನೀರು ಹಂಚಿಕೆ ಕುರಿತು ರಾಜ್ಯದ ನಿಲುವಿಗೆ ಬೆಂಬಲ ವ್ಯಕ್ತಪಡಿಸಿದರು.
Post a Comment