ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಿಂದ (HDMC) ಧಾರವಾಡ ನಗರವನ್ನು ಪ್ರತ್ಯೇಕಿಸಿ, ‘ಧಾರವಾಡ ಮಹಾನಗರ ಪಾಲಿಕೆ’ ರಚಿಸಬೇಕೆಂಬ ಬಹುದಿನಗಳ ಬೇಡಿಕೆ ಮತ್ತೆ ಮುನ್ನೆಲೆಗೆ ಬಂದಿದೆ.
ಧಾರವಾಡ ನಗರಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಸ್ಥಾಪಿಸುವ ಕುರಿತು ಹಿರಿಯ ವಕೀಲ ಬಿ.ಡಿ. ಹಿರೇಮಠ ಅವರ ನೇತೃತ್ವದ ಹೋರಾಟ ಸಮಿತಿ ವತಿಯಿಂದ ಸಮಾಲೋಚನಾ ಸಭೆ ನಡೆಸಲಾಯಿತು. ಸಭೆಯಲ್ಲಿ ಧಾರವಾಡವನ್ನು ಹುಬ್ಬಳ್ಳಿ-ಧಾರವಾಡ ಅವಳಿ ನಗರ ಪಾಲಿಕೆಯಿಂದ ಬೇರ್ಪಡಿಸಿ ಪ್ರತ್ಯೇಕ ಪಾಲಿಕೆ ರಚಿಸುವ ಅಗತ್ಯದ ಕುರಿತು ಪ್ರಮುಖವಾಗಿ ಚರ್ಚಿಸಲಾಯಿತು.
ಅಭಿವೃದ್ಧಿ ಹಾಗೂ ಆಡಳಿತಕ್ಕೆ ಅನುಕೂಲ
ಧಾರವಾಡ ನಗರವು ತನ್ನದೇ ಆದ ವಿಶಿಷ್ಟ ಭೌಗೋಳಿಕ, ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಮಹತ್ವ ಹೊಂದಿದ್ದು, ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಯಾದರೆ ನಗರದ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ದೊರೆಯಲಿದೆ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು.
ಸ್ಥಳೀಯ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು, ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವುದು ಹಾಗೂ ನಗರ ಆಡಳಿತವನ್ನು ಇನ್ನಷ್ಟು ಪರಿಣಾಮಕಾರಿಯಾಗಿಸುವ ನಿಟ್ಟಿನಲ್ಲಿ ಪ್ರತ್ಯೇಕ ಪಾಲಿಕೆ ಅಗತ್ಯ ಎಂಬುದು ಹೋರಾಟ ಸಮಿತಿಯ ಪ್ರಮುಖ ವಾದವಾಗಿದೆ.
ಸಚಿವ ಸಂತೋಷ್ ಲಾಡ್‌ಗೆ ಮನವಿ
ಈ ಹಿನ್ನೆಲೆಯಲ್ಲಿ ಹೋರಾಟ ಸಮಿತಿಯ ಪ್ರಮುಖರು ಧಾರವಾಡದ ಸರ್ಕಿಟ್ ಹೌಸ್‌ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರನ್ನು ಭೇಟಿಯಾಗಿ, ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ರಚಿಸುವ ಕುರಿತು ಸುದೀರ್ಘವಾಗಿ ಚರ್ಚಿಸಿದರು.
ಪ್ರತ್ಯೇಕ ಪಾಲಿಕೆ ರಚನೆಯಿಂದ ಧಾರವಾಡ ನಗರದ ಅಭಿವೃದ್ಧಿಗೆ ಆಗಬಹುದಾದ ಪ್ರಯೋಜನಗಳು ಹಾಗೂ ಆಡಳಿತಾತ್ಮಕ ಅನುಕೂಲಗಳ ಕುರಿತು ಸಚಿವರಿಗೆ ವಿವರಿಸಿ ಮನವಿ ಸಲ್ಲಿಸಲಾಯಿತು.
ಧಾರವಾಡದ ಸಮಗ್ರ ಅಭಿವೃದ್ಧಿ ಹಾಗೂ ನಗರದ ಜನರ ಆಡಳಿತಾತ್ಮಕ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೋರಾಟ ಸಮಿತಿ ಒತ್ತಾಯಿಸಿದೆ.
ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆಗಾಗಿ ನಡೆಯುತ್ತಿರುವ ಈ ಹೋರಾಟ ಮುಂದಿನ ದಿನಗಳಲ್ಲಿ ಯಾವ ರೂಪ ಪಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.
Post a Comment