⚡ಟ್ರೆಂಡಿಂಗ್

18 ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳಿ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

18 ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳಿ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

ಧಾರವಾಡ, ಸೆ.19: 18 ವರ್ಷ ಪೂರ್ಣಗೊಂಡಿರುವ ಪ್ರತಿಯೊಬ್ಬ ಅರ್ಹ ಯುವಕ-ಯುವತಿಯೂ ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ಕಡ್ಡಾಯವಾಗಿ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಧಾರವಾಡ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಕರೆ ನೀಡಿದರು.

ಧಾರವಾಡದ ಅಂಜುಮನ್ ಸಂಸ್ಥೆಯ ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026ರ ಅಂಗವಾಗಿ ಆಯೋಜಿಸಿದ್ದ ವಿಶೇಷ ಸ್ವೀಪ್ ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಂಜುಮನ್ ಸಂಸ್ಥೆಯಲ್ಲಿ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಧಾರವಾಡ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳಿರುವ ಹಿನ್ನೆಲೆಯಲ್ಲಿ ಅರ್ಹ ವಿದ್ಯಾರ್ಥಿಗಳು ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳುವುದರ ಜೊತೆಗೆ, ತಮ್ಮ ಸುತ್ತಮುತ್ತಲಿನ ಅರ್ಹ ನಾಗರಿಕರಿಗೂ ಈ ಕುರಿತು ಮಾಹಿತಿ ನೀಡಿ ಹೆಸರು ಸೇರ್ಪಡೆಗೆ ಪ್ರೋತ್ಸಾಹಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಯಾರೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು

18 ವರ್ಷ ಪೂರ್ಣಗೊಂಡ ಯಾವುದೇ ಯುವಕ ಅಥವಾ ಯುವತಿ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂಬುದು ವಿಶೇಷ ನೋಂದಣಿ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ಮನೆಯಲ್ಲಿ ಅಥವಾ ಸುತ್ತಮುತ್ತಲಿನ ಪ್ರದೇಶದಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದ ಅರ್ಹ ನಾಗರಿಕರಿದ್ದರೆ, ಅವರು ಫಾರ್ಮ್-6 ಮೂಲಕ ಅರ್ಜಿ ಸಲ್ಲಿಸಿ ಹೆಸರು ನೋಂದಾಯಿಸಿಕೊಳ್ಳುವಂತೆ ತಿಳಿಸಬೇಕು ಎಂದು ಹೇಳಿದರು.

ಯುವ ಮತದಾರರಷ್ಟೇ ಅಲ್ಲದೆ, ವಿವಿಧ ಕಾರಣಗಳಿಂದ ಇದುವರೆಗೆ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಿಕೊಳ್ಳದ ಹಿರಿಯರು ಸೇರಿದಂತೆ ಎಲ್ಲ ಅರ್ಹ ನಾಗರಿಕರೂ ನೋಂದಣಿ ಮಾಡಿಕೊಳ್ಳುವಂತೆ ಪ್ರೇರೇಪಿಸಬೇಕು ಎಂದು ಅವರು ಹೇಳಿದರು.

ಮತದಾನ ಹಕ್ಕು ಹಾಗೂ ಜವಾಬ್ದಾರಿ

ಮತದಾನ ಪ್ರತಿಯೊಬ್ಬ ನಾಗರಿಕನ ಹಕ್ಕು ಹಾಗೂ ಜವಾಬ್ದಾರಿಯಾಗಿದೆ. 18 ವರ್ಷ ಪೂರ್ಣಗೊಂಡ ಅರ್ಹ ನಾಗರಿಕರಿಗೆ ಸಂವಿಧಾನವು ಮತದಾನದ ಹಕ್ಕು ನೀಡಿದೆ. ಯಾವುದೇ ಒತ್ತಡ ಅಥವಾ ಪ್ರಭಾವಕ್ಕೆ ಒಳಗಾಗದೆ ತಮ್ಮ ಮತದಾನದ ಹಕ್ಕನ್ನು ಜವಾಬ್ದಾರಿಯಿಂದ ಚಲಾಯಿಸುವ ಮೂಲಕ ಸರ್ಕಾರ ಹಾಗೂ ಚುನಾಯಿತ ಪ್ರತಿನಿಧಿಗಳ ಆಯ್ಕೆಯಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಯುವಕರು ತಮ್ಮ ಸುತ್ತಮುತ್ತಲಿನ ಅರ್ಹ ವ್ಯಕ್ತಿಗಳಿಗೂ ಮತದಾರರಾಗಿ ನೋಂದಣಿಯಾಗುವಂತೆ ತಿಳಿಸಬೇಕು. ಚುನಾವಣೆ ಸಂದರ್ಭದಲ್ಲಿ ಯಾವುದೇ ಆಸೆ-ಆಮಿಷಗಳಿಗೆ ಒಳಗಾಗದೆ ತಮ್ಮ ಹಕ್ಕನ್ನು ಚಲಾಯಿಸಬೇಕು. ಯುವಕರು ಸಮಾಜದ ಇಂದಿನ ಹಾಗೂ ನಾಳೆಯ ಪ್ರಮುಖ ಪ್ರಜೆಗಳಾಗಿದ್ದು, ತಮ್ಮ ಚುನಾವಣಾ ಹಕ್ಕು ಮತ್ತು ಜವಾಬ್ದಾರಿಗಳ ಕುರಿತು ಅರಿವು ಹೊಂದಿರಬೇಕು ಎಂದು ಸಲಹೆ ನೀಡಿದರು.

ಕರಡು ಮತದಾರರ ಪಟ್ಟಿ ಪರಿಶೀಲಿಸಿ

ಜಿಲ್ಲೆಯಲ್ಲಿ ವಿಶೇಷ ಮತದಾರರ ನೋಂದಣಿ ಅಭಿಯಾನ ನಡೆಯುತ್ತಿದ್ದು, ಈಗಾಗಲೇ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಕುಟುಂಬದ ಎಲ್ಲ ಸದಸ್ಯರ ಹೆಸರುಗಳು ಕರಡು ಪಟ್ಟಿಯಲ್ಲಿ ಇರುವುದನ್ನು ಪ್ರತಿಯೊಬ್ಬರೂ ಪರಿಶೀಲಿಸಿಕೊಳ್ಳಬೇಕು. ಹೆಸರು ಇಲ್ಲದಿದ್ದರೆ ಅರ್ಹತೆಗೆ ಅನುಗುಣವಾಗಿ ಅಗತ್ಯ ಕ್ರಮ ಕೈಗೊಂಡು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲೆಯನ್ನು ಸ್ವಚ್ಛ ಜಿಲ್ಲೆಯನ್ನಾಗಿ ಮಾಡಲು ಪ್ರತಿಯೊಬ್ಬರೂ ಕೈಜೋಡಿಸಬೇಕು. ‘ಸ್ವಚ್ಛತಾ ಹಿ ಸೇವಾ’ ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಯುವಕರು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕರೆ ನೀಡಿದರು.

ಪ್ರಜಾಪ್ರಭುತ್ವದಲ್ಲಿ ಯುವಕರ ಪಾತ್ರ ಪ್ರಮುಖ

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ್ ಮಾತನಾಡಿ, ಪ್ರಜಾಪ್ರಭುತ್ವದ ಪ್ರಮುಖ ಅಂಗವಾಗಿರುವ ಚುನಾವಣಾ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕರೂ ಭಾಗವಹಿಸುವುದು ಅಗತ್ಯ ಎಂದರು.

18 ವರ್ಷ ಪೂರ್ಣಗೊಂಡ ಪ್ರತಿಯೊಬ್ಬ ಯುವಕ-ಯುವತಿಯೂ ಮತದಾರರಾಗಿ ನೋಂದಣಿಯಾಗಬೇಕು. ಮತದಾನ ಮಾಡುವುದು ಕೇವಲ ಹಕ್ಕಲ್ಲ, ಜವಾಬ್ದಾರಿಯೂ ಆಗಿದೆ. 61ನೇ ಸಂವಿಧಾನ ತಿದ್ದುಪಡಿಯ ಮೂಲಕ ಮತದಾನದ ವಯೋಮಿತಿಯನ್ನು 21ರಿಂದ 18 ವರ್ಷಕ್ಕೆ ಇಳಿಸಲಾಗಿದ್ದು, ಅರ್ಹ ಯುವಜನರು ತಮ್ಮ ಮತದಾನದ ಹಕ್ಕನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.

ಮತದಾರರ ಪಟ್ಟಿಯಲ್ಲಿ ಅನರ್ಹರ ಹೆಸರುಗಳನ್ನು ತೆಗೆದುಹಾಕುವುದು ಹಾಗೂ ಅರ್ಹರ ಹೆಸರುಗಳನ್ನು ಸೇರ್ಪಡೆಗೊಳಿಸುವುದು ಎಸ್‌ಐಆರ್ ಪ್ರಕ್ರಿಯೆಯ ಪ್ರಮುಖ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ಸೆ.19 ಮತ್ತು 20ರಂದು ರಾಜ್ಯಾದ್ಯಂತ ವಿಶೇಷ ಮತದಾರರ ನೋಂದಣಿ ಅಭಿಯಾನ ನಡೆಯುತ್ತಿದ್ದು, ಕಾಲೇಜುಗಳಲ್ಲಿಯೂ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.

18 ವರ್ಷ ಪೂರ್ಣಗೊಂಡು ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದವರು ಫಾರ್ಮ್-6 ಭರ್ತಿ ಮಾಡಿ ಸಮೀಪದ ಬಿಎಲ್‌ಒ ಅಥವಾ ಕಾಲೇಜಿನ ಸಂಬಂಧಿತ ಸಿಬ್ಬಂದಿಗೆ ಸಲ್ಲಿಸಬೇಕು. ಪ್ರತಿಯೊಂದು ಮತವೂ ಮಹತ್ವದ್ದಾಗಿದ್ದು, ಯುವಕರು ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಭುವನೇಶ ಪಾಟೀಲ್ ಹೇಳಿದರು.

ಸೈಕಲ್ ಮತ್ತು ಬೈಕ್ ರ್ಯಾಲಿ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಹಾಗೂ ಮತದಾರರ ಜಾಗೃತಿಗಾಗಿ ಸ್ವೀಪ್ ವತಿಯಿಂದ ಸೈಕಲ್ ಮತ್ತು ಬೈಕ್ ರ್ಯಾಲಿ ನಡೆಯಿತು. ಅಂಜುಮನ್ ಕಾಲೇಜಿನಿಂದ ಆರಂಭವಾದ ರ್ಯಾಲಿಯು ಸುಭಾಸ್ ರಸ್ತೆ, ಕೆಸಿಸಿ ಬ್ಯಾಂಕ್, ಸ್ವಾಮಿ ವಿವೇಕಾನಂದ ಸರ್ಕಲ್ ಹಾಗೂ ಜುಬ್ಲಿ ಸರ್ಕಲ್ ಮೂಲಕ ಸಾಗಿ ಮತ್ತೆ ಅಂಜುಮನ್ ಕಾಲೇಜಿನಲ್ಲಿ ಮುಕ್ತಾಯಗೊಂಡಿತು.

ಕಾರ್ಯಕ್ರಮದಲ್ಲಿ ಅಂಜುಮನ್ ಸಂಸ್ಥೆಯ ಪ್ರಾಧ್ಯಾಪಕರು ಸ್ವಚ್ಛತಾ ಹಿ ಸೇವಾ ಪ್ರತಿಜ್ಞೆಯನ್ನು ಬೋಧಿಸಿದರು. ಅಂಜುಮನ್ ಸಂಸ್ಥೆಯ ಪ್ರಾಂಶುಪಾಲ ಎನ್.ಬಿ. ನಾಲತ್ವಾಡ ಸ್ವಾಗತಿಸಿದರು. ಸಯ್ಯದ್ ತಾಜುದ್ದೀನ್ನಿಸಾ ನಿರೂಪಿಸಿ ವಂದಿಸಿದರು.

ವೇದಿಕೆಯಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ಅನುಪ್ರೀಯಾ ಸಾಕ್ಯಾ, ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ಬಿ.ಎಸ್. ರಾಠೋಡ, ಜಿಲ್ಲಾ ಯೋಜನಾ ಸಮನ್ವಯ ಅಧಿಕಾರಿ ಎಂ.ಎಸ್. ಹುಡೆದಮನಿ, ಅಂಜುಮನ್ ಸಂಸ್ಥೆಯ ಉಪಾಧ್ಯಕ್ಷ ಅಲ್ಲಾಹಜ್ ಬಸೀರ್ ಅಹ್ಮದ್ ಜಹಾಂಗೀರದಾರ್, ಕಾರ್ಯದರ್ಶಿ ಕಧೀರ್ ನಾಸಿಂ ಸರಿಗಿತ್ ಸೇರಿದಂತೆ ವಿವಿಧ ಅಧಿಕಾರಿಗಳು, ಪ್ರಾಧ್ಯಾಪಕರು, ಸಿಬ್ಬಂದಿ, ಬಿಎಲ್‌ಒಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Post a Comment

Previous Post Next Post
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...