ಪೊಲೀಸ್ ಭದ್ರತೆ ಭೇದಿಸಿ ಜೋಶಿ ನಿವಾಸಕ್ಕೆ ರೈತರ ಮುತ್ತಿಗೆ..!
ಜೋಶಿ ಮನೆ ಎದುರು ರೈತರ ಆಕ್ರೋಶ — ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ
ಹುಬ್ಬಳ್ಳಿ: ಕಬ್ಬು ಬೆಳೆಗಾರರಿಗೆ ₹5,500 ಬೆಂಬಲ ಬೆಲೆ ನೀಡಬೇಕು ಎಂದು ಆಗ್ರಹಿಸಿ ಹುಬ್ಬಳ್ಳಿಯಲ್ಲಿ ರೈತರ ಪ್ರತಿಭಟನೆ ತೀವ್ರಗೊಂಡಿದೆ. ಪ್ರತಿಭಟನೆಯ ಭಾಗವಾಗಿ ರೈತರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ನಿವಾಸದತ್ತ ಮುತ್ತಿಗೆ ಹಾಕಲು ಮುಂದಾಗಿದ್ದು, ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.
ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದರೂ, ರೈತರು ಬ್ಯಾರಿಕೇಡ್‌ಗಳನ್ನು ದಾಟಿ ಜೋಶಿ ಅವರ ನಿವಾಸದತ್ತ ತೆರಳಲು ಪ್ರಯತ್ನಿಸಿದರು. ಈ ವೇಳೆ ರೈತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಕಬ್ಬಿಗೆ ನ್ಯಾಯಯುತ ಬೆಲೆ ನೀಡುವಂತೆ ಆಗ್ರಹಿಸಿದರು.
ಕಬ್ಬು ಬೆಳೆಗಾರರಿಗೆ ₹5,500 ಬೆಂಬಲ ಬೆಲೆ ನಿಗದಿಪಡಿಸುವವರೆಗೆ ಹೋರಾಟ ಮುಂದುವರಿಸುವುದಾಗಿ ರೈತ ಮುಖಂಡರು ಎಚ್ಚರಿಕೆ ನೀಡಿದರು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಥಳಕ್ಕೆ ಬಂದು ರೈತರ ಅಹವಾಲು ಆಲಿಸಿ, ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯ ಹಿನ್ನೆಲೆಯಲ್ಲಿ ಜೋಶಿ ನಿವಾಸದ ಸುತ್ತಮುತ್ತ ಪೊಲೀಸರು ಹೆಚ್ಚಿನ ಭದ್ರತೆ ನಿಯೋಜಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ.
ರೈತರ ಪ್ರತಿಭಟನೆ ಮುಂದುವರಿದಿದ್ದು, ಕಬ್ಬಿನ ಬೆಲೆ ಕುರಿತ ಬೇಡಿಕೆ ಈಡೇರುವವರೆಗೆ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದಾರೆ.
إرسال تعليق